ನಮ್ಮ ಸಿಂಧನೂರು, ಜುಲೈ 7
ತುಂಗಭದ್ರಾ ಜಲಾಶಯಕ್ಕೆ ದಿನಾಂಕ: 07-07-2024 ಭಾನುವಾರದಂದು 50,715 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಜಲಾಶಯದಲ್ಲಿ ಇಂದು 18.25 ಟಿಎಂಸಿ ನೀರು ಸಂಗ್ರಹವಿದ್ದರೆ, 263 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಇದೇ ದಿನ ಕಳೆದ ವರ್ಷ ಜಲಾಶಯದಲ್ಲಿ 3.08ಟಿಎಂಸಿ ನೀರು ಸಂಗ್ರಹವಿದ್ದರೆ, 302 ಕ್ಯೂಸೆಕ್ ನೀರು ಒಳಹರಿವಿತ್ತು, 249 ಕ್ಯೂಸೆಕ್ ನೀರು ಹೊರಗೆ ಹರಿಬಿಡಲಾಗಿತ್ತು. ತುಂಗಾ ನದಿ ತುಂಬಿದ್ದು ಭಾರಿ ಪ್ರಮಾಣದಲ್ಲಿ ನೀರು ನದಿಗೆ ಹರಿಬಿಡಲಾಗಿರುವುದರಿಂದ ತುಂಗಭದ್ರಾ ಡ್ಯಾಮಿಗೆ ಒಳಹರಿವಿನ ಪ್ರಮಾಣ ಹೆಚ್ಚಿದೆ. ಅಲ್ಲದೇ ಶಿವಮೊಗ್ಗ ಭಾಗ ಸೇರಿದಂತೆ ಜಲಾನಯನ ಪ್ರದೇಶದಲ್ಲಿಯೂ ಮಳೆಯಾಗುತ್ತಿರುವುದರಿಂದ ದಿನದಿಂದ ದಿನಕ್ಕೆ ಒಳಹರಿವಿನ ಪ್ರಮಾಣ ಹೆಚ್ಚುತ್ತಿದೆ. ಪ್ರಸಕ್ತ ಮಳೆ ವರ್ಷದಲ್ಲಿ ನಾಲ್ಕೂವರೆ ಟಿಎಂಸಿಗೂ ಹೆಚ್ಚು ನೀರು ಜಲಾಶಯಕ್ಕೆ ಹರಿದು ಬರುತ್ತಿರುವುದು ದಾಖಲೆಯಾಗಿದೆ. ಇನ್ನು ಎರಡ್ಮೂರು ದಿನ ಇದೇ ಪರಿಸ್ಥಿತಿ ಮುಂದುವರೆದರೆ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಲಿದೆ. ಕಳೆದ 10 ವರ್ಷಗಳ ಹಿಂದೆ ಇದೇ ದಿನ ಜಲಾಶಯದಲ್ಲಿ 22.91 ಟಿಎಂಸಿ ನೀರು ಸಂಗ್ರಹವಿದ್ದರೆ, 18,702 ಕ್ಯೂಸೆಕ್ ನೀರು ಒಳಹರಿವಿತ್ತು, 201 ಕ್ಯೂಸೆಕ್ ನೀರು ಹೊರಗೆ ಹರಿಬಿಡಲಾಗಿತ್ತು.