(ಪೊಲಿಟಿಕಲ್ ನ್ಯೂಸ್ : ಬಸವರಾಜ ಹಳ್ಳಿ)
ನಮ್ಮ ಸಿಂಧನೂರು, ಏಪ್ರಿಲ್ 12
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಜನಾರ್ದನ ರೆಡ್ಡಿ ಬಿಜೆಪಿ ಸೇರಿದ್ದೇ ತಡ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಅವರೊಂದಿಗೆ ಕ್ಷೇತ್ರಾದ್ಯಂತ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಯಲಬುರ್ಗಾ, ಕನಕಗಿರಿ, ಮಸ್ಕಿ ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಕಡೆ ಪ್ರಚಾರ ಸಭೆಗಳಲ್ಲಿ ಕಾಂಗ್ರೆಸ್‌ನ ವಿರುದ್ಧ ವಾಗ್ದಾಳಿಯನ್ನೇ ನಡೆಸಿದ್ದಾರೆ.
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾಗಿ ಗಂಗಾವತಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಗೆಲುವು ಸಾಧಿಸಿರುವ ಜನಾರ್ದನ ರೆಡ್ಡಿ ಪುನಃ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಪಕ್ಷದ ಹಲವು ಕಾರ್ಯಕರ್ತರಿಗೆ ಉತ್ಸಾಹ ತಂದಿದ್ದರೆ, ಇನ್ನೂ ಕೆಲವರ ಮುನಿಸಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
ಇತ್ತೀಚೆಗೆ ನಡೆದ ರಾಜ್ಯ ಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪರ ಬೆಂಬಲ ವ್ಯಕ್ತಪಡಿಸಿ, ತದನಂತರ ದಿಢೀರ್ ಆಗಿ ದೆಹಲಿ ಮಟ್ಟದ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಸಾಧಿಸಿ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪಾಳಯದ ಪಾಲಾಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಹೊಸಬರು, ಹಳಬರು ಚರ್ಚೆ ಮುನ್ನೆಲೆಗೆ
ಪಕ್ಷಕ್ಕಾಗಿ ದುಡಿದ ಈ ಹಿಂದಿನ ಮುಖಂಡರನ್ನು ಕಡೆಗಣಿಸಿ ಹೊಸ ಮುಖಗಳಿಗೆ ಮಣೆ ಹಾಕುವ ಮೂಲಕ ಬಿಜೆಪಿ ಹೈಕಮಾಂಡ್ ತಪ್ಪು ಮಾಡುತ್ತಿದೆ. ಹೊಸಬರು ಪಕ್ಷವನ್ನು ಸಂಘಟಿಸದೇ ಒಣ ಪ್ರಚಾರದ ಮೂಲಕ ಮುನ್ನೆಲೆಗೆ ಬಂದು ಇಡೀ ಪಾರ್ಟಿಯನ್ನು ಆಪೋಶನ ತೆಗೆದುಕೊಳ್ಳುತ್ತಿದ್ದು, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಫಲಿತಾಂಶದ ಮೇಲೆ ಪರಿಣಾಮ ಬೀರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೆಸರೇಳಲಿಚ್ಚಿಸದ ಪಕ್ಷದ ಕಾರ್ಯಕರ್ತರೊಬ್ಬರು ಹೇಳುತ್ತಾರೆ.