ನಮ್ಮ ಸಿಂಧನೂರು, ಮೇ 30
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ 187 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದ್ದು, ಈ ಭ್ರಷ್ಟಾಚಾರದಲ್ಲಿ ಪಾಲ್ಗೊಂಡವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಕೆಆರ್‌ಎಸ್ ಪಾರ್ಟಿ ರಾಜ್ಯ ಯುವ ಘಟಕದ ಅಧ್ಯಕ್ಷ ನಿರುಪಾದಿ ಗೋಮರ್ಸಿ ಒತ್ತಾಯಿಸಿದ್ದಾರೆ.
ಈ ಕುರಿತು ಗುರುವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪರಿಶಿಷ್ಟ ಪಂಗಡ ಸಮುದಾಯದ ಬಡವರ ಕಲ್ಯಾಣಕ್ಕೆ ಮೀಸಲಿರಿಸಿದ ನೂರಾರು ಕೋಟಿ ರೂಪಾಯಿ ಸರ್ಕಾರದ ಅನುದಾನದ ಹಣವನ್ನು ಭ್ರಷ್ಟ ಅಧಿಕಾರಿಗಳು, ರಾಜಕಾರಣಿಗಳು ಜೊತೆಗೆ ಸೇರಿಕೊಂಡು ಲೂಟಿ ಹೊಡೆದಿದ್ದಾರೆ. ಇದರಿಂದ ಪರಿಶಿಷ್ಟ ಪಂಗಡದ ಜನಸಮುದಾಯದ ಕಲ್ಯಾಣಕ್ಕೆ ಬಳಕೆಯಾಗಬೇಕಾದ ಹಣ ಸೋರಿಕೆಯಾಗಿದೆ. ಈ ನಿಗಮದಲ್ಲಿ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿ ಚಂದ್ರಶೇಖರ್ ಅವರಿಗೆ ಈ ಎಲ್ಲ ಮಾಹಿತಿ ಗೊತ್ತಿದ್ದರೂ ಮೌನವಾಗಿ ಉಳಿದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಗಮದಲ್ಲಿನ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಭ್ರಷ್ಟಾಚಾರ ನಡೆಸಿದವರ ಹಾಗೂ ಭ್ರಷ್ಟಾಚಾರದಲ್ಲಿಕೀ ಅಧಿಕಾರಿಯನ್ನು ಸಿಲುಕಿಸಿ ಅವರ ಸಾವಿಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಿರುಪಾದಿ ಆಗ್ರಹಿಸಿದ್ದಾರೆ.