ಸಿಂಧನೂರು: ವಿದ್ಯಾರ್ಥಿನಿ ಬರ್ಬರ ಕೊಲೆ, ಪ್ರಗತಿಪರ ಸಂಘಟನೆಗಳ ಒಕ್ಕೂಟ ಖಂಡನೆ, ತಪ್ಪಿತಸ್ಥನಿಗೆ ಕಠಿಣ ಶಿಕ್ಷೆಗೆ ಆಗ್ರಹ

Spread the love

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜನವರಿ 31

ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಎಂಎಸ್‌ಸಿ ಸ್ನಾತಕೋತ್ತರ ವಿದ್ಯಾರ್ಥಿನಿ ಶಿಫಾ ಅವರನ್ನು ಚಾಕುವಿನಿಂದ ಇರಿದು ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಿರುವುದು ಅತ್ಯಂತ ಅಮಾನುಷ ಹಾಗೂ ಪೈಶಾಚಿಕ ಕೃತ್ಯವಾಗಿದ್ದು, ಆರೋಪಿ ಮುಬಿನ್‌ಗೆ ಕಠಿಣಾತಿ ಕಠಿಣ ಶಿಕ್ಷೆ ವಿಧಿಸಿ ವಿದ್ಯಾರ್ಥಿನಿಯರು ಹಾಗೂ ಪಾಲಕರ ಆತಂಕವನ್ನು ನಿವಾರಣೆ ಮಾಡಬೇಕೆಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಸರ್ಕಾರವನ್ನು ಆಗ್ರಹಿಸಿದೆ.
ಈ ಕುರಿತು ಶುಕ್ರವಾರ ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆಯ ಸಂಚಾಲಕರಾದ ಡಿ.ಎಚ್.ಕಂಬಳಿ, ಚಂದ್ರಶೇಖರ ಗೊರಬಾಳ, ಎಸ್.ದೇವೇಂದ್ರಗೌಡ, ಬಾಷುಮಿಯಾ, ಟಿ.ಹುಸೇನ್‌ಸಾಬ್, ನಾಗರಾಜ್ ಪೂಜಾರ್, ಬಸವರಾಜ ಬಾದರ್ಲಿ, ಸಮ್ಮದ್ ಚೌದ್ರಿ ಅವರು, ವಿದ್ಯಾರ್ಥಿನಿ ಪ್ರೀತಿ ಮಾಡಲು ನಿರಾಕರಿಸಿದ ಕಾರಣಕ್ಕೆ ಅಮಾನವೀಯತೆಯಿಂದ ವರ್ತಿಸಿ ಭೀಕರವಾಗಿ ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯವಾಗಿದೆ. ಇಂತಹ ಕೃತ್ಯಗಳಲ್ಲಿ ಯಾರೇ ಭಾಗಿಯಾದರೂ ಅವರನ್ನು ತನಿಖೆಗೆ ಒಳಪಡಿಸಿ ಅತ್ಯಂತ ಕಠಿಣಾತಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಘಟನೆ ವಿದ್ಯಾರ್ಥಿನಿಯರು, ಅವರ ಪಾಲಕರು ಹಾಗೂ ಮಹಿಳಾ ಸಮುದಾಯದಲ್ಲಿ ಆತಂಕವನ್ನು ಉಂಟುಮಾಡಿದೆ. ಇತ್ತೀಚಿನ ದಿನಗಳಲ್ಲಿ ಯುವತಿಯರು ಶಿಕ್ಷಣದ ಕಡೆಗೆ ಹೆಚ್ಚು ಆಸಕ್ತಿ ವಹಿಸುತ್ತಿರುವ ಸಂದರ್ಭದಲ್ಲಿ ಇಂತಹ ಅಮಾನವೀಯ ಘಟನೆಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇದು ಅವರ ಶೈಕ್ಷಣಿಕ ಹಿನ್ನಡೆಗೆ ಕಾರಣವಾಗುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣಾತಿ ಕಠಿಣ ಶಿಕ್ಷೆ ವಿಧಿಸಬೇಕು, ಪಾಸ್ಟ್‌ಟ್ರ್ಯಾಕ್ ಕೋರ್ಟ್ ಮೂಲಕ ಈ ಕೊಲೆ ಪ್ರಕರಣವನ್ನು ಅತ್ಯಂತ ಶೀಘ್ರಗತಿಯಲ್ಲಿ ವಿಚಾರಣೆ ನಡೆಸಿ ತಪ್ಪಿತಸ್ಥನಿಗೆ ಶಿಕ್ಷೆ ವಿಧಿಸಬೇಕು ಹಾಗೂ ಸರ್ಕಾರ ಮತ್ತು ಪೊಲೀಸ್ ಇಲಾಖೆ, ಈ ತರಹದ ದುಷ್ಕೃತ್ಯಗಳು ಮರುಕಳಿಸದಂತೆ ನಿರ್ಭಯಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಮತ್ತು ವಿದ್ಯಾರ್ಥಿನಿಯರಿಗೆ, ಯುವತಿಯರಿಗೆ ಹಾಗೂ ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಪೊಲೀಸ್ ಇಲಾಖೆ ಹಾಗೂ ಸರ್ಕಾರವನ್ನು ಅವರು ಆಗ್ರಹಿಸಿದ್ದಾರೆ.


Spread the love

Leave a Reply

Your email address will not be published. Required fields are marked *