ನಮ್ಮ ಸಿಂಧನೂರು, ಜೂನ್ 16
ನಗರದ ಕಾಲೋನಿಯೊಂದರಲ್ಲಿ ವಿವಾಹಿತನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ದುಷ್ಕೃತ್ಯ ಭಾನುವಾರ ರಾತ್ರಿ ವರದಿಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ದೈಹಿಕ ಮತ್ತು ಮಾನಸಿಕವಾಗಿ ಘಾಸಿಗೊಳಗಾದ (ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕಿ) ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಇಲಾಖೆ ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಕಾನೂನು ಕ್ರಮ ಜರುಗಿಸಬೇಕು ಎಂದು ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ.ಕೆ ಅವರು ಆಗ್ರಹಿಸಿದ್ದಾರೆ.