ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜನವರಿ 7
ನಗರದ ಟೌನ್‌ಹಾಲ್‌ನಲ್ಲಿ ದಿನಾಂಕ: 8-01-2026 ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ಸಿಂಧನೂರು ಜಿಲ್ಲಾ ಹೋರಾಟ ಸಮಿತಿಯ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ದಿನಾಂಕ:02-01-2026ರಂದು ಶಾಸಕ ಹಂಪನಗೌಡ ಬಾದರ್ಲಿ ಅವರ ನೇತೃತ್ವದಲ್ಲಿ ನಗರಸಭೆ ಸಭಾಭವನದಲ್ಲಿ ಕರೆದಿದ್ದ ವಿವಿಧ ಸಂಘಟನೆಗಳ ಪ್ರಮುಖರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ರಚನೆ ಹೋರಾಟ ಕುರಿತಂತೆ ಚಟುವಟಿಕೆ ಚುರುಕುಗೊಳಿಸಲು ‘ಸಿಂಧನೂರು ಜಿಲ್ಲಾ ಹೋರಾಟ ಸಮಿತಿ’ ರಚಿಸಬೇಕೆನ್ನುವ ಅಭಿಪ್ರಾಯ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ವಿಸ್ತೃತವಾಗಿ ಚರ್ಚಿಸಲು ಗುರುವಾರದಂದು ಪಕ್ಷಾತೀತ ಸಭೆ ಕರೆದಿದ್ದಾರೆ ಎಂದು ಹೇಳಲಾಗುತ್ತಿದೆ.
ಪಕ್ಷಾತೀತ ಸಭೆ
ಜಿಲ್ಲಾ ರಚನೆ ಕುರಿತಂತೆ ಪಕ್ಷಾತೀತ ಹೋರಾಟ ರೂಪಿಸುವ ಹಿನ್ನೆಲೆಯಲ್ಲಿ ಎಲ್ಲ ಸಂಘ-ಸಂಸ್ಥೆಗಳವರು, ಧಾರ್ಮಿಕ ಮುಖಂಡರು, ರಾಜಕೀಯ ಮುಖಂಡರು, ಯುವ ಮುಖಂಡರು, ರಾಜಕೀಯ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿ ಯುವಜನರು, ಮಹಿಳೆಯರು ಭಾಗವಹಿಸಿ ಸಲಹೆ-ಸೂಚನೆಗಳನ್ನು ನೀಡಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.
