ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜನವರಿ 20
ಎಂ.ಎಸ್.ಪಿ.ಅಡಿ ಜೋಳ ಖರೀದಿ ನೋಂದಣಿ ಪ್ರಕ್ರಿಯೆ ಕಳೆದ ಎರಡ್ಮೂರು ದಿನಗಳಿಂದ ಸ್ಥಗಿತಗೊಂಡಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಸಚಿವರು ಹಾಗೂ ಕೆಒಎಫ್ ಅಧ್ಯಕ್ಷರಾದ ವೆಂಕಟರಾವ್ ನಾಡಗೌಡ ಅವರು ಆಹಾರ ಇಲಾಖೆಯ ಕಾರ್ಯದರ್ಶಿ ಎಂ.ಕನಗವಲ್ಲಿ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದ್ದಾರೆ. “ಜೋಳ ಬೆಳೆದ ರೈತರಿಗೆ ನ್ಯಾಯಸಮ್ಮತ ಬೆಲೆ ದೊರಕಬೇಕು ಹಾಗೂ ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದಾರೆ” ಎಂದು ತಿಳಿದುಬಂದಿದೆ. ಮಾಜಿ ಸಚಿವರ ಮನವಿಗೆ ಸ್ಪಂದಿಸಿದ ಕಾರ್ಯದರ್ಶಿಯವರು ಈ ಕುರಿತು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಗೊತ್ತಾಗಿದೆ.
