ಲೋಕಲ್ ನ್ಯೂಸ್: ಬಸವರಾಜ ಹಳ್ಳಿ, ಹಸಮಕಲ್
ನಮ್ಮ ಸಿಂಧನೂರು, ಜೂನ್ 14, 2026
ನಗರದ ಗಂಗಾವತಿ ಮಾರ್ಗದ ಬೀದಿ ಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆನ್ನುವ ಬೇಡಿಕೆಗೆ ಸಂಬಂಧಿಸಿದಂತೆ 1 ತಿಂಗಳ ಗಡುವು ಮುಕ್ತಾಯವಾಗಿದೆ. ಆದರೆ ಇಲ್ಲಿಯವರೆಗೂ ಸಂಬಂಧಿಸಿದ ಇಲಾಖೆಯವರಿಂದ ಯಾವುದೇ ರೀತಿಯ ಸ್ಪಂದನೆ ದೊರೆತಿಲ್ಲ ಎಂದು ಕೆಲ ಸಣ್ಣಪುಟ್ಟ ವ್ಯಾಪಾರಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಿಯೋಗ ತೆರಳಿ ಸಿಎಂಗೆ ಮನವಿ ಸಲ್ಲಿಕೆ
ಬೀದಿ ಬದಿ ವ್ಯಾಪಾರಿಗಳ ಹೋರಾಟ ಸಮಿತಿಯ ನಿಯೋಗ ಮೇ 5, 2026ರಂದು ಆಗಿನ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ 24-12-2024ರಂದು ಬೀದಿ ಬದಿ ವ್ಯಾಪಾರಸ್ಥರನ್ನು ಒಕ್ಕಲೆಬ್ಬಿಸಿದ ಪರಿಣಾಮ ಸಣ್ಣಪುಟ್ಟ ವ್ಯಾಪಾರಸ್ಥರು ಉದ್ಯೋಗ ಕಳೆದುಕೊಂಡು ಅವರು ಕುಟುಂಬಗಳು ಸಂಕಷ್ಟಕ್ಕೀಡಾಗಿರುವ ಪರಿಸ್ಥಿತಿಯನ್ನು ಶಾಸಕ ಹಂಪನಗೌಡ ಅವರ ಸಮ್ಮುಖದಲ್ಲಿ ಸಿಎಂ ಅವರಿಗೆ ಮನವರಿಕೆ ಮಾಡಿದ್ದರು. ಈ ಕುರಿತಂತೆ ಸಿಎಂ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಈ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದ್ದರು. ಆದರೆ ಈಗ ಸಿಎಂ ಅವರೇ ಬದಲಾಗಿದ್ದು, ಬೀದಿ ವ್ಯಾಪಾರಸ್ಥರ ಸಮಸ್ಯೆ ಬಗೆಹರಿಯುವ ಸ್ಪಷ್ಟ ಲಕ್ಷಣಗಳು ಕಾಣುತ್ತಿಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ.
‘ಇಲಾಖೆ ಹಂತದಲ್ಲಿ ಪತ್ರ ವ್ಯವಹಾರ ನಡೆದಿದೆ’
“ಅಂದಿನ ಸಿಎಂ ಅವರ ಬಳಿ ನಿಯೋಗ ತೆರಳಿ ಮನವಿ ಸಲ್ಲಿಸಲಾಗಿತ್ತು. ಈ ಕುರಿತಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸಿಎಂ ಅವರು ಅಂದು ನಿರ್ದೇಶನ ನೀಡಿದ್ದರು. ಸಿಎಂ ಅವರ ನಿರ್ದೇಶನದ ಹಿನ್ನೆಲೆಯಲ್ಲಿ ಸಂಬAಧಿಸಿದ ಇಲಾಖೆಯಲ್ಲಿ ಪತ್ರ ವ್ಯವಹಾರ ನಡೆದಿದೆ. ಒಂದು ತಿಂಗಳ ಒಳಗಾಗಿ ಸಮಸ್ಯೆ ಪರಿಹರಿಸಬೇಕೆಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರಿಗೆ ಹೋರಾಟ ಸಮಿತಿಯಿಂದ ಗಡುವು ನೀಡಲಾಗಿತ್ತು. ರಾಜಕೀಯ ಬದಲಾವಣೆಯ ಹಿನ್ನೆಲೆಯಲ್ಲಿ ವಿಳಂಬವಾಗಿದ್ದು, ಗಡುವಿನ ಅವಧಿ ಮುಗಿದಿದೆ. ಇಷ್ಟರಲ್ಲೇ ಈ ಕುರಿತಂತೆ ಶಾಸಕರು ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ, ಮಾಹಿತಿ ಪಡೆದು ಈ ಕುರಿತು ಹೋರಾಟ ಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಹೋರಾಟ ಸಮಿತಿಯ ಸದಸ್ಯರೊಬ್ಬರು ತಿಳಿಸಿದ್ದಾರೆ.
