ನಮ್ಮ ಸಿಂಧನೂರು, ಫೆಬ್ರವರಿ 6
ಕರ್ನಾಟಕಕ್ಕೆ ತೆರಿಗೆ ಪಾಲಿನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಅನ್ಯಾಯವಾಗುತ್ತಿದ್ದು, ಇದನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಫೆ.7, 2024ರಂದು ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಬೇಕೆಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರಿಗೆ ಸಿಎಂ ಸಿದ್ದರಾಮಯ್ಯ ಜನರ ಪರವಾಗಿ ಫೆ.೫ರಂದು ಪತ್ರ ಬರೆದು ವಿನಂತಿಸಿದ್ದಾರೆ. ಕೇಂದ್ರ ಸರ್ಕಾರದಿಂದ ಆಗುತ್ತಿರುವ ನಿರಂತರ ಅನ್ಯಾಯ ಮತ್ತು ಕರ್ನಾಟಕದ ವಿಚಾರವಾಗಿ ಕೇಂದ್ರ ಸರ್ಕಾರವು ತೋರುತ್ತಿರುವ ತಾರತಮ್ಯ ಧೋರಣೆಯನ್ನು ಖಂಡಿಸಿ, ಇದರ ವಿರುದ್ಧ ಪ್ರತಿಭಟಿಸಲು ಮತ್ತು ದೇಶದ ಗಮನ ಸೆಳೆಯಲು ತೀರ್ಮಾನಿಸಲಾಗಿದೆ. ರಾಜ್ಯದ ಉಪ ಮುಖ್ಯಮಂತ್ರಿಗಳು, ಎಲ್ಲ ಸಚಿವರು, ಶಾಸಕರು ಹಾಗೂ ಸಂಸದರು ಸೇರಿ ಒಂದು ದಿನದ ಧರಣಿ ಸತ್ಯಾಗ್ರಹವನ್ನು ನಡೆಸಲು ತೀರ್ಮಾನಿಸಿದ್ದೇವೆ ಎಂದು ಪತ್ರದಲ್ಲಿ ಸಿಎಂ ವಿವರಿಸಿದ್ದಾರೆ.
ಕೇಂದ್ರ ಸರ್ಕಾರ ಬರ ಪರಿಹಾರ ನೀಡದಿರುವುದು, ವಿವಿಧ ಯೋಜನೆಗಳಿಗೆ ಅನುಮತಿ ಮತ್ತು ನೆರವು ನೀಡುವಲ್ಲಿ ತೋರುತ್ತಿರುವ ನಿರ್ಲಕ್ಷö್ಯ ಮತ್ತು ವಿಳಂಬ ಇತ್ಯಾದಿಗಳು ರಾಜ್ಯದಲ್ಲಿ ಜನಜೀವನವನ್ನು ವಿಪರೀತವಾಗಿ ಬಾಧಿಸುತ್ತಿವೆ. ಈ ವಿಚಾರವನ್ನು ಜವಾಬ್ದಾರಿಯುತ ಚುನಾಯಿತ ಪ್ರತಿನಿಧಿಗಳಾದ ತಾವು ಅರಿತೇ ಇರುತ್ತೀರಿ. ಆದುದರಿಂದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವಂತೆ ಸಿಎಂ ಅವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.