( ಸ್ಪೆಷಲ್ ನ್ಯೂಸ್: ಬಸವರಾಜ ಹಳ್ಳಿ )
ನಮ್ಮ ಸಿಂಧನೂರು, ಮಾರ್ಚ್ 18
ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ವಿಧಾನಸಭೆ ಚುನಾವಣೆಯಲ್ಲಿ ಪರಸ್ಪರ ಜಗಳ್‌ಬಂದಿ ಮೂಲಕ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕಾರಣಕ್ಕೆ ಜುಗಲ್‌ಬಂದಿ ತಾಳಿರುವುದು ಉಭಯ ಪಕ್ಷಗಳ ಕೆಲ ಮುಖಂಡರಲ್ಲಿ ಇರುಸು-ಮುರುಸು ಉಂಟು ಮಾಡಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಆಟಕ್ಕುಂಟು, ಲೆಕ್ಕಕ್ಕಿಲ್ಲ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಿದ್ದೇ ತಡ, ಕ್ಷೇತ್ರದ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಅವರು ಇತ್ತೀಚೆಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನಷ್ಟೇ ಮಾತನಾಡಿಸಿ, ಜೆಡಿಎಸ್ ಮುಖಂಡರನ್ನು ಗಣನೆಗೆ ತೆಗೆದುಕೊಳ್ಳದೇ ತೆರಳಿರುವುದೇ ಇದಕ್ಕೆ ಸಾಕ್ಷಿ ಎಂದು ಆ ಪಕ್ಷದ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 20ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದು, ಈ ಸಂದರ್ಭದಲ್ಲಿ ಮೈತ್ರಿ ಪಕ್ಷವಾದ ಜೆಡಿಎಸ್‌ನವರನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಎಂದು ಪಕ್ಷದ ರಾಜ್ಯ ಮುಖಂಡರು ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೇ, ಮೈತ್ರಿ ಧರ್ಮ ಪಾಲನೆ ಮಾಡಬೇಕಾದ ಬಿಜೆಪಿಯವರು ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನವರಿಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ, ಮೈತ್ರಿ ಮಾಡಿಕೊಳ್ಳದೇ ಇದ್ದರೆ ಜೆಡಿಎಸ್‌ಗೆ ಅದರದ್ದೇ ಆದ ವರ್ಚಸ್ಸು ಇರುತ್ತಿತ್ತು. ಮೈತ್ರಿ ಮಾಡಿಕೊಂಡಂದಿನಿಂದ ಇನ್ನಷ್ಟು ವರ್ಚಸ್ಸು ಕುಗ್ಗಿದಂತಾಗಿದೆ ಎಂದು ಹೆಸರೇಳಲಿಚ್ಚಿಸದ ಜೆಡಿಎಸ್‌ನ ಮುಖಂಡರೊಬ್ಬರು ತಿಳಿಸಿದ್ದಾರೆ.
ಹಳೆ ಮುನಿಸು ಚಾಲ್ತಿಗೆ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿಯ ಸಿಂಧನೂರು ತಾಲೂಕಿನ ಸ್ಥಳೀಯ ಮುಖಂಡರು ಬಹಿರಂಗವಾಗಿ ಪರಸ್ಪರ ಆರೋಪ, ಪ್ರತ್ಯಾರೋಪ ಮಾಡಿದ್ದು, ಇನ್ನು ಹಸಿಯಾಗಿಯೇ ಇದೆ. ಇದು ಲೋಕಸಭಾ ಚುನಾವಣೆಯಲ್ಲಿ ಒಟ್ಟಿಗೆ ಚುನಾವಣಾ ಕಾರ್ಯಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಮುಜುಗರ ತಂದಿದೆ. ಅಲ್ಲದೇ ಬಿಜೆಪಿಯವರು ಮೈತ್ರಿ ಧರ್ಮ ಪಾಲಿಸುತ್ತಿಲ್ಲ. ಪಕ್ಷದ ವರಿಷ್ಠರು ಹಾಗೂ ಮಾಜಿ ಪ್ರಧಾನಿಯವರಾದ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಸೂಚನೆಯ ಹಿನ್ನೆಲೆಯಲ್ಲಿ ತಟಸ್ಥವಾಗಿದ್ದೇವೆ ಹೊರತು ಬೇರೇನೂ ಇಲ್ಲ ಎಂದು ಹೆಸರೇಳಲಿಚ್ಛಿಸದ ಜೆಡಿಎಸ್‌ನ ಕಾರ್ಯಕರ್ತರೊಬ್ಬರು ಹೇಳುತ್ತಾರೆ.
ಮಾಜಿ ಸಚಿವ ವೆಂಕಟರಾವ್ ನಾಡಗೌಡರ ಕಡೆಗಣನೆ ?
ಬಿಜೆಪಿಯವರು ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದರೂ, ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಆರೋಪ-ಪ್ರತ್ಯಾರೋಪ ಸೇರಿದಂತೆ ಸ್ಥಳೀಯ ಮುಖಂಡರ ನಡುವಿನ ಮುನಿಸಿನ ಕಾರಣಕ್ಕೆ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಅವರನ್ನು ಕಡೆಗಣಿಸಲಾಗಿದೆ. ಅಲ್ಲದೇ ಪಕ್ಷದ ಮುಖಂಡರನ್ನೂ ಯಾರೂ ಇದುವರೆಗೂ ಗಣನೆಗೆ ತೆಗೆದುಕೊಂಡಿಲ್ಲ ಎನ್ನುವ ಮಾತುಗಳು ಜೆಡಿಎಸ್ ವಲಯದಲ್ಲಿ ಕೇಳಿಬರುತ್ತಿವೆ. ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜೆಡಿಎಸ್ ಬಹುಹಿಂದಿನಿಂದಲೂ ತನ್ನದೇ ಆದ ವರ್ಚಸ್ಸನ್ನು ಹೊಂದಿದ್ದು, ರಾಜಕೀಯ ಬದಲಾವಣೆಯ ಹಿನ್ನೆಲೆಯಲ್ಲಿ ಸ್ವಲ್ಪ ಹಿನ್ನಡೆ ಅನುಭವಿಸಿದೆಯಷ್ಟೇ, ಈ ಬಾರಿ ಮೈತ್ರಿ ಮಾಡಿಕೊಳ್ಳದೇ ಹೋಗಿದ್ದರೆ ಸಮರ್ಥ ಅಭ್ಯರ್ಥಿಯನ್ನು ನಿಲ್ಲಿಸಿ ತನ್ನದೇ ಆದ ಸಾಮರ್ಥ್ಯವನ್ನು ತೋರಿಸುತ್ತಿತ್ತು ಎಂದು ಜೆಡಿಎಸ್ ಕಾರ್ಯಕರ್ತರೊಬ್ಬರು ಹೇಳುತ್ತಾರೆ.