ಸಿಂಧನೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಎಸ್‌ಐಒ ಪ್ರತಿಭಟನೆ

Spread the love

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಮೇ 19, 2026

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಈ ಹಗರಣವನ್ನು ಕಾಲಮಿತಿಯೊಳಗೆ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಎಸ್‌ಐಒ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ರವಾನಿಲಸಾಯಿತು.
ನೀಟ್ ಪರೀಕ್ಷೆಯನ್ನು ದೇಶದ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದು, ಪರೀಕ್ಷೆಗೆ ಮುಂಚಿತವೇ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿರುವುದು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮತ್ತು ಕೇಂದ್ರ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಮುಂಜಾಗ್ರತೆ ವಹಿಸಬೇಕಾದ ಸರ್ಕಾರ ಮತ್ತು ಅಧಿಕಾರಿಗಳು ಬೇಜವಾಬ್ದಾರಿ ವಹಿಸಿರುವುದೇ ಇದಕ್ಕೆ ಪ್ರಮುಖ ಕಾರಣ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಬಡ ಮತ್ತು ಮಧ್ಯಮ ವರ್ಗದ ಲಕ್ಷಾಂತರ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಯು ವರ್ಷಗಳ ಶ್ರಮ ಮತ್ತು ಅವರ ಭವಿಷ್ಯದ ಕನಸಾಗಿರುತ್ತದೆ. ಆದರೆ ಸರ್ಕಾರದ ಆಡಳಿತಾತ್ಮಕ ಅಸಮರ್ಥತೆ ಮತ್ತು ಸಂಘಟಿತ ಭ್ರಷ್ಟಾಚಾರದಿಂದಾಗಿ ಈ ಕನಸುಗಳು ನುಚ್ಚುನೂರಾಗಿವೆ. ಇಂತಹ ಹಗರಣಗಳು ಪದೇ ಪದೇ ಮರುಕಳಿಸುತ್ತಿರುವುದು ವ್ಯವಸ್ಥೆಯೊಳಗಿನ ಬಿಕ್ಕಟ್ಟನ್ನು ಸೂಚಿಸುತ್ತದೆ. ಇದು ಯುವಜನರಲ್ಲಿ ಮಾನಸಿಕ ಒತ್ತಡ ಮತ್ತು ಅಸುರಕ್ಷಿತ ಭಾವನೆಯನ್ನು ಹೆಚ್ಚಿಸುತ್ತಿದೆ ಎಂದು ಎಸ್‌ಐಒನ ಜಿಶಾನ್ ಅವರು ಆಪಾದಿಸಿದರು.

Namma Sindhanuru Click For Breaking & Local News

ಕೇಂದ್ರೀಕೃತ ಪರೀಕ್ಷೆಗಳನ್ನು ಸುರಕ್ಷಿತವಾಗಿ ನಡೆಸುವಲ್ಲಿ ಎನ್‌ಟಿಎ ಪದೇ ಪದೇ ವಿಫಲ ವಾಗುತ್ತಿರುವುದು ಪ್ರಸ್ತುತ ಮಾದರಿಯು ದೋಷಪೂರಿತವಾಗಿದೆ ಎಂಬುದನ್ನು ಸಾಬೀತುಪಡಿಸುತ್ತದೆ. ಆದ್ದರಿಂದ, ಪರೀಕ್ಷಾ ವ್ಯವಸ್ಥೆಯ ವಿಕೇಂದ್ರೀಕರಣ ಮತ್ತು ಏಜೆನ್ಸಿಯ ರಚನೆಯಲ್ಲಿ ಸಂಪೂರ್ಣ ಸುಧಾರಣೆಯನ್ನು ತರಬೇಕೆಂದು ವಿದ್ಯಾರ್ಥಿ ಮುಖಂಡರು ಆಗ್ರಹಿಸಿದರು.
ಕೇಂದ್ರ ಶಿಕ್ಷಣ ಸಚಿವರು ಈ ವೈಫಲ್ಯದ ನೈತಿಕ ಹೊಣೆ ಹೊತ್ತು ತಕ್ಷಣವೇ ರಾಜೀನಾಮೆ ನೀಡಬೇಕು, ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವ ಎಲ್ಲಾ ವ್ಯಕ್ತಿಗಳು ಮತ್ತು ಜಾಲಗಳ ವಿರುದು ಪಾರದರ್ಶಕ, ಕಾಲಮಿತಿ ತನಿಖೆಯಾಗಬೇಕು ಹಾಗೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು, ನ್ಯಾಯಸಮ್ಮತ ಮತ್ತು ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ ವಿಫಲವಾಗುತ್ತಿರುವ ಬಗ್ಗೆ ಕೇಂದ್ರ ಸರ್ಕಾರವು ಉತ್ತರಿಸಬೇಕು ಎಂಬ ಹಕ್ಕೊತ್ತಾಯದ ಮನವಿಪತ್ರವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಸ್‌ಐಒ ಜಿಲ್ಲಾ ಘಟಕದ ಅಧ್ಯಕ್ಷ ಡಾ.ವಾಸಿಂ, ತಾಲ್ಲೂಕು ಘಟಕದ ಅಧ್ಯಕ್ಷ ಅಫ್ಜಲ್ ಹುಸೇನ್, ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನ ಅಬುಲೈಸ್, ಜಮಾಅತೆ ಇಸ್ಲಾಂ ಹಿಂದ್‌ನ ತಾಲ್ಲೂಕು ಘಟಕದ ಅಧ್ಯಕ್ಷ ಹುಸೇಬ್‌ಸಾಬ್, ಜಾಂದ್‌ಪಾಷಾ ಜಾಗೀರದಾರ ಸೇರಿದಂತೆ ಎಸ್‌ಐಒನ ತಾಲ್ಲೂಕು ಘಟಕದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಇದ್ದರು.


Spread the love

Leave a Reply

Your email address will not be published. Required fields are marked *