ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಜುಲೈ 23
ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ (ರಿ) ಬೆಂಗಳೂರು ತಾಲೂಕು ಘಟಕ ಸಿಂಧನೂರು ವತಿಯಿಂದ ನಗರದ ಕೋಟೆ ಈರಣ್ಣ ಕಲ್ಯಾಣ ಮಂಟಪದಲ್ಲಿ 26-07-2025ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಬಣಜಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಸಮಾಜದ ಹಿರಿಯ ಮುಖಂಡ ವೀರೇಶ ದಿದ್ದಿಗಿ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸಮಾಜದ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಪಡೆದ, ನೀಟ್ ಪರೀಕ್ಷೆಯಲ್ಲಿ ರ‍್ಯಾಂಕ್‌ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಅಲ್ಲದೇ ಹೊಸದಾಗಿ ಪ್ರಮುಖ ಸರ್ಕಾರಿ ಹುದ್ದೆ ಪಡೆದುಕೊಂಡವರು ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಆತ್ಮೀಯವಾಗಿ ಸನ್ಮಾನಿಸಲಾಗುವುದು. ಸಮಾಜದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಗುರು-ಹಿರಿಯರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ” ಎಂದರು.
ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ
ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಸಮಾಜ ಬಾಂಧವರು ತನು-ಮನ-ಧನದಿಂದ ಸಹಕರಿಸುವ ಜೊತೆಗೆ, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಆ ಮೂಲಕ ಸಮಾಜದ ಪ್ರತಿಭಾವಂತರಿಗೆ ಪ್ರೋತ್ಸಾಹ ನೀಡಬೇಕು ಎಂದು ಮುಖಂಡ ವೀರೇಶ ದಿದ್ದಿಗಿ ಮನವಿ ಮಾಡಿದ್ದಾರೆ.